BIG NEWS : ಸಿಎಂ ಸಿದ್ದರಾಮಯ್ಯನವರ ಮಹತ್ವದ “ಜಾತಿ ಗಣತಿ ವರದಿ” ಇದೇ ದಿನಾಂಕದಂದು ಬಹಿರಂಗ…!!
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ “ಜಾತಿ ಗಣತಿ ವರದಿ” ಅನುಷ್ಠಾನ ಸಂಬಂಧ ಇಂದು ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಜಾರಿಯ ಸಾಧ್ಯಾಸಾಧ್ಯತೆ ಬಗ್ಗೆ ಚರ್ಚಿಸಲಾಗಿದ್ದು, ಅಂತಿಮವಾಗಿ ಮುಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಗಿದೆ.
ಈ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಲಕೋಟೆ ಓಪನ್ ಮಾಡಲಾಗಿದ್ದು, ಸಚಿವರ ಕೈಗೆ ಜಾತಿ ಗಣತಿ ದತ್ತಾಂಶ ನೀಡಿದ ಬಳಿಕ ಆ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಸಚಿವರ ಅಭಿಪ್ರಾಯ ಆಲಿಸಿದ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.
ಜನ ಗಣತಿ ಸಮೀಕ್ಷಾ ವರದಿಯನ್ನು 2024ರ ಫೆಬ್ರವರಿಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದೇ ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಜಾತಿ ಗಣತಿ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.