ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಜೆಪಿಯ ರೆಬೆಲ್ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ದೂರವಾಣಿ ಕರೆ ಮೂಲಕ ಜಗದೀಶ್ ಶೆಟ್ಟರ್ ಅವರಿಗೆ ಸಂಪರ್ಕ ಮಾಡಿದ್ದಾರೆ ಎನ್ನಲಾಗಿದೆ.
ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಇವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನಗೊಂಡು ಜಗದೀಶ್ ಶೆಟ್ಟರ್ ಅವರು ಇಂದು ಶಾಸಕ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲಾ ರಣದೀಪ್ ಸಿಂಗ್ ಅವರು ಶೆಟ್ಟರ್ ಗೆ ದೂರವಾಣಿ ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. “ನಾವು ನಿಮಗೆ ಎಲ್ಲಾ ಸೂಕ್ತಸ್ಥಾನಮಾನ ನೀಡುತ್ತೇವೆ, ಗೌರವದಿಂದ ನಡೆಸಿಕೊಳ್ಳುತ್ತೇವೆ. ನೀವು ಕಾಂಗ್ರೆಸ್ ಗೆ ಬನ್ನಿ” ಎಂದು ಆಹ್ವಾನ ನೀಡಿದ್ದಾರೆ.
ಇಂದು ಶಿರಸಿಗೆ ರಾಜೀನಾಮೆ ನೀಡಲು ಹೋಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, “ಯಾವ ಕಾಂಗ್ರೆಸ್ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ಕಾಂಗ್ರೆಸ್ ಪರ ಇರುವವರು ನನ್ನನ್ನು ಸಂಪರ್ಕಿಸಿದ್ದಾರೆ” ಎಂದು ಹೇಳಿದ್ದಾರೆ.