ಯುಜಿ ಸಿಇಟಿ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ.

ಕೊಪ್ಪಳ : ಮೇ 20 ಮತ್ತು ಮೇ 21ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ 2023ರ ಯುಜಿ ಸಿಇಟಿ ಪರೀಕ್ಷೆಗಳ ಸಿದ್ಧತೆ ಕುರಿತು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್-2 ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಪರೀಕ್ಷೆಗಳನ್ನು ಸುಗಮ, ಶಾಂತಿಯುತ ಹಾಗೂ ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೆಂದ್ರಗಳಿಗೆ ತಲುಪಿಸಲು ಗುರುತಿಸಲಾದ ಮಾರ್ಗಗಳ ಮೂಲಕ ಹಾಗೂ ಸಮಯಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಬೇಕು. ಈ ಕುರಿತು ರಚಿಸಲ್ಪಟ್ಟಿರುವ ಸಮಿತಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿ‌ ಇದ್ದು, ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತಗಾಗಿ ಹಾಗೂ ಎಸ್ಕಾರ್ಟಗಾಗಿ ಪೋಲಿಸ್ ಇಲಾಖೆಯಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ವೀಕ್ಷಕರು, ಒಬ್ಬ ಪ್ರಶ್ನೆ ಪತ್ರಿಕೆ ಪಾಲಕರು, ಇಬ್ಬರು ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು, ಕೈ ಗಡಿಯಾರ, ಮೊಬೈಲ್ ಮುಂತಾದವುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತೀನ ಚೀಟಿಯನ್ನು ತರಬೇಕು. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಮುಖ್ಯ ಅಧೀಕ್ಷಕರು ಹಾಗೂ ಇತರೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಡಿಡಿಪಿಯು ಅವರಿಗೆ ಸೂಚನೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮೃಣಾಲ ಸಾಹುಕಾರ ಅವರು ಮಾತನಾಡಿ, ಯುಜಿ ಸಿಇಟಿ ಪರೀಕ್ಷೆಗಳು ಮೇ 20 ಮತ್ತು ಮೇ 21ರ ಬೆಳಿಗ್ಗೆ 10.30 ರಿಂದ 11.50 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ನಡೆಯಲಿದ್ದು, ಪರೀಕ್ಷೆಗಾಗಿ ಕೊಪ್ಪಳ ನಗರ ಮತ್ತು ಭಾಗ್ಯನಗರ ಸೇರಿ ಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 4310 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿರುತ್ತಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಎಂ.ಎ ರಡ್ಡೇರ್, ಆಹಾರ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಪಶು ಇಲಾಖೆ ಉಪನಿರ್ದೇಶಕರಾದ ಡಾ ಹೆಚ್.ನಾಗರಾಜ, ಜಿಲ್ಲಾ ಉದ್ಯೋಗಾಧಿಕಾರಿಗಳಾದ ಪ್ರಾಣೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!