ಕರಾವಳಿ ಭಾಗದಲ್ಲಿ ಕೇಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಕೂಡ ನೀಡಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆಯೂ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಮತ್ತೊಂದೆಡೆ ಉಡುಪಿ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಡಿಸಿ ನೀಡಿದ್ದಾರೆ.
ನಿನ್ನೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. 20 ಸೆಂ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದಿತ್ತು. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.