ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಬರೋಬ್ಬರಿ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲಗಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಈಗಾಗಲೇ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಲ್ಲಿ ಬಿರುಗಾಳಿ ಗಂಟೆಗೆ 40 ರಿಂದ 45 ಕಿಮೀ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಖಡಕ್ ಸೂಚನೆ ನೀಡಿದೆ. ಇನ್ನು ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಸೂಚಿಸಿದೆ.
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ. ಆದರೆ, ಬೆಳಗಾವಿ, ಬೀದರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರೀ ಮಳೆಯಾಗಲಿದೆ. ಅಂದಹಾಗೆ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.