ಸ್ವಾತಂತ್ರ್ಯೋತ್ಸವ-2023 : ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅಧ್ಯಕ್ಷತೆಯಲ್ಲಿ ಪೂರ್ವಭಾವಿಸಭೆ

You are currently viewing ಸ್ವಾತಂತ್ರ್ಯೋತ್ಸವ-2023 : ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅಧ್ಯಕ್ಷತೆಯಲ್ಲಿ ಪೂರ್ವಭಾವಿಸಭೆ
ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಕೊಪ್ಪಳ : ಆಗಷ್ಟ್ ಹದಿನೈದರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಸೂಚನೆ ನೀಡಿದರು. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 02ರಂದು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಆಗಸ್ಟ್ 15ರಂದು ಬೆಳಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಸ್ವಾತಂತ್ರ್ಯೊತ್ಸವ ಹಿನ್ನೆಲೆಯಲ್ಲಿ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಶಿಷ್ಠಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರಕ್ಕೆ, ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಕೈಗೊಳ್ಳಬೇಕು. ಮಹತ್ವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಯೋಧರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸಿದಲ್ಲಿ ಅವರಿಗೆ ಕಾರ್ಯಕ್ರಮದಲ್ಲಿಯೇ ಸನ್ಮಾನಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನರನ್ನುದ್ದೇಶಿಸಿ ಮಾತನಾಡುವರು. ಇದಕ್ಕಾಗಿ ವಿವಿಧ ಇಲಾಖೆಗಳು ಅಗತ್ಯ ಮಾಹಿತಿಯನ್ನು ಸಕಾಲಕ್ಕೆ ನೀಡಬೇಕು ಎಂದು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ‌ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಅಗತ್ಯ ಪೂರ್ವಬಾವಿ ತರಬೇತಿ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ.ಕೆ.ಎಸ್.ಆರ್.ಟಿ.ಸಿ ಬಸ್ ಸೌಕರ್ಯ ಒದಗಿಸಬೇಕು. ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು. ಪ್ಲಾಸ್ಟಿಕ್ ಧ್ವಜವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಯಾವ ಅಂಗಡಿಗಳಲ್ಲೂ ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಕ್ರಮಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಾರ್ವಜನಿಕರಿಗೂ ಮಾಹಿತಿ ನೀಡಬೇಕು ಎಂದರು.

ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ತಾಲೂಕು ಮಟ್ಟದಲ್ಲಿ ಧ್ವಜ ಸಂಹಿತೆಯನ್ನು ಪಾಲಿಸಿ ವ್ಯವಸ್ಥಿತ ಧ್ವಜಾರೋಹಣ ನೆರವೇರಿಸುವಂತೆ ಆಯಾ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯೋತ್ಸವವನ್ನು ವ್ಯವಸ್ಥಿತ ಆಚರಣೆಗೆ ರಚಿಸಿದ ಸಮಿತಿಗಳು ತಮಗೆ ನೀಡಿದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು. ಪಥಸಂಚಲನದಲ್ಲಿ ಹೆಚ್ಚು ತಂಡಗಳು ಪಾಲ್ಗೊಳ್ಳುವಂತಿಲ್ಲ. ಶಾಲಾ ಮ್ಕಕಳಿಂದ ಸಾಮೂಹಿಕ ನೃತ್ಯ, ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಇದ್ದಲ್ಲಿ ಅಂತಹ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಸಮಿತಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಡಿವೈಎಸ್ಪಿ ಶರಣಪ್ಪ ಸಬೇದಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

Leave a Reply

error: Content is protected !!