ಬೆಂಗಳೂರು : ಕಾವೇರಿ ನದಿ ನೀರು ಬಿಡುಗಡೆಗೆ ನಿರ್ದೇಶನ ಬಯಸಿ ತಮಿಳುನಾಡು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಪುರಸ್ಕರಿಸಿದೆ. ಅದು ಅಲ್ಲದೇ ಕಾವೇರಿ ವಿಚಾರಣೆಗೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿದೆ. ಹೀಗಾಗಿ ಇಂದು ರಾಜ್ಯದಲ್ಲಿ ಮಹತ್ವದ ಸರ್ವಪಕ್ಷ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯ ಬಳಿಕ ಕರ್ನಾಟಕದ ಮುಂದಿನ ನಡೆಯ ಬಗ್ಗೆ ನಿರ್ಧಾರವಾಗಲಿದೆ.
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲ. ಬೇಡಿಕೆಯಂತೆ ನೀರು ಬಿಡಲಾಗದು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಹೇಳಿದ ಬಳಿಕವೂ, ಸಿಟ್ಟಿನಿಂದ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ನ್ಯಾಯಾಧಿಕರಣದ ಆದೇಶದಂತೆ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದೆ. ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ರಾಜ್ಯದ ಸಚಿವರು, ಸಂಸದರು, ಅಧಿಕಾರಿಗಳು, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರ ತಂಡ ಹಾಗೂ ತಾಂತ್ರಿಕ ತಂಡದಜ ಸದಸ್ಯರನು, ಬಿಜೆಪಿ, ಜೆಡಿಎಸ್ ಶಾಸಕರು ಸೇರಿದಂತೆ ವಿವಿಧ ಮುಖಂಡರು ಭಾಗಿಯಾಗಲಿದ್ದಾರೆ. ಈ ಕುರಿತು ಇಂದು ಸರ್ವಪಕ್ಷಗಳು ಮಹತ್ವದ ಚರ್ಚೆ ನಡೆಸಲಾಗುತ್ತದೆ.