ಬೆಂಗಳೂರು : ಬಿಜೆಪಿಯ ರಾಜ್ಯ ಘಟಕದ ನೂತನ ಅಧ್ಯಕ್ಷರಾದ ಬಳಿಕ ಬಿ ವೈ ವಿಜಯೇಂದ್ರ ಇದೀಗ ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ.
ಮಿತ್ರ ಪಕ್ಷ ಜೆಡಿಎಸ್ನ ವರಿಷ್ಠರಾದ ಹೆಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಹೆಚ್‌ಡಿಕೆ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, “ಪ್ರಧಾನಿ ಮೋದಿ, ಜೆಪಿ ನಡ್ಡಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಯವರು ದೆಹಲಿಯಲ್ಲಿ ಸಭೆ ಮಾಡಿದ ಬಳಿಕ ನಾನು ಇಂದು ಭೇಟಿಯಾಗಿದ್ದೇನೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮೈತ್ರಿ ಬಗ್ಗೆ ಮಾತನಾಡಿದ್ದೇವೆ. ಏನ್ ಸ್ಟಾಟರ್ಜಿ ಇದೆ ಅಂತ ನಾಲ್ಕು ಗೋಡೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿಯ ವಿಜಯ ಪತಾಕೆ ಹಾರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.