ಬೆಂಗಳೂರು : ಕೊಲೆಯೊಂದರ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಐಪಿಎಸ್ ಬಿ.ದಯಾನಂದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 9 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗದೀಪ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿ ಚಿತ್ರದುರ್ಗ ಮೂಲದ ರೇಣುಕಸ್ವಾಮಿ (33) ಎಂದು ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ಸುಮಾರು 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆಯ ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿಯನ್ನು ಈಗ ಕೊಡುವುದು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ಹಾಗೂ ಪೂರಕ ಮಾಹಿತಿಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.