Post Views: 49
ಗೌರಿ ಗಣೇಶ ಹಬ್ಬ, ಈದ್ ಮಿಲಾದ್ : ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಭೆ
ಹೊಸಪೇಟೆ (ವಿಜಯನಗರ) : ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್. ಅವರು ಆಗಸ್ಟ್ 29ರಂದು ಅಧಿಕಾರಿಗಳ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲೆಯು ಐತಿಹಾಸಿಕ ವಿಶೇಷತೆಯನ್ನು ಹೊಂದಿದೆ. ಇಲ್ಲಿ ಎಲ್ಲ ಧರ್ಮದವರು ಶಾಂತಿ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಅದೇ ರೀತಿ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಪ್ರತಿಯೊಬ್ಬರು ಶಾಂತಿ ಸಹಬಾಳ್ವೆಯಿಂದ ಹಬ್ಬ ಆಚರಿಸುವಂತೆ ಸುವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆಯಲ್ಲಿ ತಿಳಿಸಿದ ಮಾರ್ಗಸೂಚಿಯನುಸಾರ ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಹಬ್ಬದ ಸಂದರ್ಭದಲ್ಲಿ ಯಾವುದೇ ಕಡೆಗಳಲ್ಲಿ ಅವಘಡಗಳು ಸಂಭವಿಸಿದ ಹಾಗೆ ಮುಂಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಬ್ಬದ ಸಂದರ್ಭದಲ್ಲಿ ನಿರಂತರ ವಿದ್ಯುತ್ ಸರಬರಾಜಿಗೆ ವ್ಯವಸ್ಥೆ ಮಾಡಲು ಮತ್ತು ಅಲ್ಲಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಯಿತು.
ಹಬ್ಬದ ಹಿನ್ನೆಲೆಯಲ್ಲಿ ನಗರದ ಸೌಂದರ್ಯೀಕರಣಕ್ಕೆ ಅಗತ್ಯ ಏರ್ಪಾಡು ಮಾಡಬೇಕು. ಎಲ್ಲಾ ಕಡೆಗೆ ರಸ್ತೆಗಳು ಸರಿ ಇರುವ ಹಾಗೆ ನೋಡಿಕೊಳ್ಳಬೇಕು. ರಸ್ತೆಯಲ್ಲಿನ ತಗ್ಗು ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಹಬ್ಬದ ಹಿನ್ನೆಲೆಯಲ್ಲಿ ಅನುಮತಿ ಪಡೆದುಕೊಂಡೇ ಬ್ಯಾನರ್ ಅಳವಡಿಸುವಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಮತ್ತು ಗಣಪತಿ ವಿಗ್ರಹಗಳ ವಿಸರ್ಜನೆ ಸ್ಥಳದಲ್ಲಿ ನುರಿತ ಈಜುಪಟುಗಳು ಇರುವಂತೆ ನೋಡಿಕೊಳ್ಳಲು ನಗರಸಭೆ ಪೌರಾಯುಕ್ತರಿಗೆ ಸೂಚಿಸಲಾಯಿತು. ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಸ್ಥಾಪಿಸುವಂತಾಗಬೇಕು. ಈ ನಿಟ್ಟಿನಲ್ಲಿ ಯಾರಾದರು ಪಿಓಪಿಯ ವಿಗ್ರಹಗಳನ್ನು ಬಳಸಿದರೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಗಣಪತಿ ವಿಗ್ರಹಗಳ ವಿಸರ್ಜನೆ ವೇಳೆ ಯಾವುದೇ ರೀತಿಯ ಅವಘಡಗಳು ಆಗದಂತೆ ಆಯಾ ಮಾರ್ಗಗಳಲ್ಲಿ ಬಾಗಿರುವ ಗಿಡಗಳ ಟೊಂಗೆಗಳನ್ನು ತೆರವುಗೊಳಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಯಿತು. ಗಣಪತಿ ವಿಸರ್ಜನೆಗೆ ಅನುಕೂಲವಾಗುವಂತೆ ಗಣಪತಿ ವಿಗ್ರಹಗಳು ಸಂಚರಿಸುವ ಎಲ್ಲ ರಸ್ತೆಗಳನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಹಬ್ಬದ ಸಂದರ್ಭದಲ್ಲಿ ಯಾವುದೇ ಕಡೆಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿದಂತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಎಂದು ಅಗ್ನಿಶ್ಯಾಮಕ ಠಾಣೆಯ ಅಧಿಕಾರಿಗಳಿಗೆ ತಿಳಿಸಲಾಯಿತು. ಈ ಸಭೆಯಲ್ಲಿ ಡಿವೈಎಸ್ಪಿ ಟಿ.ಮಂಜುನಾಥ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಭೀಮಣ್ಣ ಲಾಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ, ನಗರಸಭೆ ಪೌರಾಯುಕ್ತರಾದ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.